ಬೆಳಗಾವಿ : ಜೆಎನ್‌ಯುಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಅಮೋಲ್ ಅಕೋಯಿಜಮ್ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದಿಂದ ಕಾಂಗ್ರೆಸ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸಂಸದ ಅಮೋಲ್ ಅಕೋಯಿಜಮ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಕೋರ್ಟ್ ವೃತ್ತದ ಬಳಿ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಬಿಜೆಪಿ ನಾಯಕಿ ಸೋನಾಲಿ ಸರ್ನೋಬತ್, ಶಿಲ್ಪಾ ಕೇಕಡೆ, ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.