ಬೆಳಗಾವಿಯಲ್ಲಿ ಕೃಷಿ ಇಲಾಖೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ..
ಲೋಕಾಯುಕ್ತ ಅಧಿಕಾರಿಗಳಿಗೆ ಹೆದರಿ, ಹಣ ನಾಶ ಮಾಡಿರುವ ಕೃಷಿ ಅಧಿಕಾರಿ..
ಬೆಳಗಾವಿ : ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಅದೇರೀತಿ
ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ಗೆ ಸೇರಿರುವ ಒಟ್ಟು ಮೂರು ಕಡೆ ರೇಡ್ ನಡೆದಿದೆ.
ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಸಿಬ್ಭಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿ ಬಳಿಕ ಬಾಗಿಲು ತೆಗೆದಿದ್ದಾರೆ ಎನ್ನಲಾಗಿದೆ.