ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕಾಳಜಿವಹಿಸಿ.
ಜಿಲ್ಲೆಗೆ ಮಂಜೂರಾಗಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಬಿಮ್ಸ್ ಆವರಣದಲ್ಲಿ ನಿರ್ಮಿಸುವ ಚರ್ಚೆಯಾಗಿದೆ..
ಸಚಿವ ಸತೀಶ ಜಾರಕಿಹೊಳಿ..
ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಲೋಕೊಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಜರುಗಿದ 2024-25ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಜೀವನ್ ಮಿಷನ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಇತರೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಲ್ಲಿಸುವಂತೆ ಸೂಚಿಸಿದರು.
ಜಲಜೀವನ ಮಿಷನ್ ಹಾಗೂ ಮೇಲ್ಮಟ್ಟದ ಜಲ ಸಂಗ್ರಹಾಗಾರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯಾ ಮತಕ್ಷೇತ್ರಗಳ ಶಾಸಕರುಗಳೊಡನೆ ಸಭೆ ಜರುಗಿಸಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.
ಜಿಲ್ಲೆಗೆ ಮಂಜೂರಾಗಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದಲ್ಲಿ ಅದರಲ್ಲೂ ಈಗಿರುವ ಬಿಮ್ಸ್ ಆವರಣದಲ್ಲಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಇದಕ್ಕಾಗಿ ಸೂಕ್ತ ನಿವೇಶನ ಗುರುತಿಸಲಾಗುವುದು ಎಂದರು.

ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನುರಿತ ತಜ್ಞ ವೈದ್ಯರ ಹಾಗೂ ಸಿಬ್ಬಂದಿಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿಯವರ ಗಮನಕ್ಕೂ ತರಲಾಗಿದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾದಂತಹ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಗೆ ಜಿಲ್ಲೆಯ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.
ವಿಕಲಚೇತನರಿಗೆ ವಿತರಿಸಲಾಗುವ ತ್ರಿಚಕ್ರವಾಹನಗಳನ್ನು ಆಯಾ ಆರ್ಥಿಕ ವರ್ಷದಲ್ಲಿಯೇ ವಿತರಿಸಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ವಾಹನಗಳ ವಿತರಣೆಯಲ್ಲಿ ವಿಳಂಬವಾಗಬಾರದು.
ಕೊಳಗೇರಿ ಅಭಿವೃದ್ಧಿ ನಿಗಮದ ಅಧಿಕಾರಿ ಸಭೆಗೆ ಆಗಮಿಸದೆ ಇರುವುದು ಹಾಗೂ ಸಮರ್ಪಕ ಮಾಹಿತಿ ನೀಡದೇ ಇರುವದರಿಂದ ಅವರ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ತಮ್ಮ ಹಂತದಲ್ಲಿ ಕೊಳಗೇರಿ ಅಭಿವೃದ್ಧಿ ನಿಗಮದಿಂದ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ಜರುಗಿಸಿ ಮಾಹಿತಿ ನೀಡಲು ತಿಳಿಸಿದರು.