ಸೆ.26ರಂದು ವಿಟಿಯು 26ನೇ ವಾರ್ಷಿಕ ಘಟಿಕೋತ್ಸವ…

ಸೆ.26ರಂದು ವಿಟಿಯು 26ನೇ ವಾರ್ಷಿಕ ಘಟಿಕೋತ್ಸವ…

52,025 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ..

ಮೂವರಿಗೆ ಗೌರವ ಡಾಕ್ಟರೇಟ್..

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವತಿಯಿಂದ 26ನೇ ವಾರ್ಷಿಕ ಘಟಿಕೋತ್ಸವವನ್ನು ಸೆಪ್ಟೆಂಬರ್ 26ರಂದು ಬೆಳಗಾವಿಯ ವಿಟಿಯು ಕ್ಯಾಂಪಸ್ ಜ್ಞಾನಸಂಗಮದಲ್ಲಿ ಆಯೋಜಿಸಲಾಗಿದೆ.

ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಹಾಗೂ ವಿಟಿಯು ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಬಸವರಾಜ ರಾಯರೆಡ್ಡಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭಾಗವಹಿಸಲಿದ್ದಾರೆ ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿ ಒಟ್ಟು 57,697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 52,025 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 27,437 ಬಾಲಕರು ಹಾಗೂ 24,588 ಬಾಲಕಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ. ಉತ್ತೀರ್ಣ ಪ್ರಮಾಣದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಮೂವರಿಗೆ ಗೌರವ ಡಾಕ್ಟರೇಟ್..

ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸಿಎಂಆರ್ ಜ್ಞಾನಧಾರ ಟ್ರಸ್ಟ್ ಅಧ್ಯಕ್ಷೆ ಡಾ. ಸಬಿತಾ ರಾಮಮೂರ್ತಿ, ಆರ್.ವಿ. ಶಿಕ್ಷಣ ಸಮಿತಿ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಶ್ಯಾಮ್ ಹಾಗೂ ಎಐಸಿಟಿಇ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.

ಚಿನ್ನದ ಪದಕ, ಪ್ರಶಸ್ತಿಗಳು..

ವಿಟಿಯು ವತಿಯಿಂದ 38 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತಿದೆ. ವಿವಿಧ ದತ್ತಿ ಚಿನ್ನದ ಪದಕ ಹಾಗೂ ಬಹುಮಾನಗಳಿಗೆ 49 ವಿದ್ಯಾರ್ಥಿಗಳು ಅರ್ಹರಾಗಿದ್ದು, ಒಟ್ಟಾರೆ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ.

ದಾವಣಗೆರೆಯ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಚ್.ಎಂ. ವಿಶ್ವನಾಥ್ ಅವರು 12 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ನಿಪ್ಪಾಣಿಯ ವಿಎಸ್‌ಎಂ ಸೋಮಶೇಖರ್ ಆರ್. ಕೋರಿವಾಲೆ ತಾಂತ್ರಿಕ ಮಹಾವಿದ್ಯಾಲಯದ ಸಾಕ್ಷಿ ಎಸ್. ಹಡಲಗೆ ಹಾಗೂ ಇತರ ವಿದ್ಯಾರ್ಥಿಗಳು ತಲಾ 8 ಚಿನ್ನದ ಪದಕ ಪಡೆದು ಮುಂದಿನ ಸ್ಥಾನದಲ್ಲಿದ್ದಾರೆ. ಬೆಂಗಳೂರಿನ ಸಿಎಂಆರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಚಿನ್ಮಯಿ ಎಂ. ಕಶ್ಯಪ್ ಮತ್ತು ಶಿವಮೊಗ್ಗದ ಎನ್‌ಎನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಬಿ.ಎಂ. ಧನ್ಯಶ್ರೀ ತಲಾ 7 ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ.

ಇದೇ ವೇಳೆ ವಿಟಿಯು ಘಟಿಕೋತ್ಸವದಲ್ಲಿ ಪಿಎಚ್‌.ಡಿ. ಪದವಿಗೆ 329 ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಪದವಿಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.

ವಿಟಿಯು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *