ಹೊರಗುತ್ತಿಗೆ ನೌಕರರ ಸಂಬಳ ಕಡಿತ..
ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸೂಚನೆ..
ಬೆಳಗಾವಿ : ಜಿಲ್ಲಾಧಿಕಾರಿಗಳ ಕಛೇರಿಯ ಸಭಾಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಬಳ ಕಡಿತದ ವಿಚಾರವಾಗಿ ಜಿಲ್ಲಾಧಿಕಾರಿಗಳು ಗುತ್ತಿಗೆದಾರರಿಗೆ ಕಠಿಣ ಕ್ರಮದ ಎಚ್ಚರಿಕೆಯ ಸಂದೇಶ ನೀಡಿದ್ದಾರೆ..
ಹೊರಗುತ್ತಿಗೆ ನೌಕರರಿಗೆ ಸಂಬಳವನ್ನು ಕಡಿತ ಮಾಡಿ ನೀಡಲಾಗುತ್ತಿದೆ ಎಂದು ವ್ಯಾಪಕ ದೂರುಗಳು ಬರುತ್ತಿವೆ. ಆದ್ದರಿಂದ ಕನಿಷ್ಠ ವೇತನ ನಿಯಮಗಳಡಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಂಬಳವನ್ನು ಗುತ್ತಿಗೆದಾರರು ಕಡಿತಗೊಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಕೆಲ ಪ್ರಮುಖ ಸರಕಾರಿ ಇಲಾಖೆಗಳಲ್ಲಿ, ಆಸ್ಪತ್ರೆಗಳಲ್ಲಿ ಹಾಗೂ ಗಾರ್ಮೆಂಟ್ ಮತ್ತಿತರ ಕಡೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವವರಿಗೆ ಕನಿಷ್ಠ ವೇತನದಲ್ಲಿಯೇ ಅಕ್ರಮವಾಗಿ ಕಡಿತ ಮಾಡಲಾಗುತ್ತಿದೆ ಎಂಬ ದೂರುಗಳಿದ್ದು, ಈ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು.

ಒಂದು ವೇಳೆ ಗುತ್ತಿಗೆದಾರರು ಕನಿಷ್ಠ ವೇತನ ನೀಡದಿರುವುದು ಕಂಡುಬಂದಲ್ಲಿ ಅಂತಹ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಜ್ಯೋತಿ ಕಾಂತೆ ಅವರು, ಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣೆ, ಪುನರ್ವಸತಿ ಹಾಗೂ ಕಾಯ್ದೆ ಅನುಷ್ಠಾನದ ಕುರಿತು ಮಾಹಿತಿಯನ್ನು ನೀಡಿದರು.
ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಾಲಕಾರ್ಮಿಕರ ಪತ್ತೆ ಹಾಗೂ ರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶೃತಿ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ಮಹ್ಮದ್ ಬಶೀರ್ ಅನ್ಸಾರಿ, ಕಾರ್ಮಿಕ ಅಧಿಕಾರಿಗಳಾದ ತರನ್ನುಮ್, ಮಲ್ಲಿಕಾರ್ಜುನ ಜೋಗುರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ ಪ್ರಕಾಶ ಬಸಪ್ಪ ಕುರಗುಂದ..