ಪ್ರವಾಹ ಪರಿಸ್ಥಿತಿ ಎದುರಿಸಲು ಮುಂಜಾಗ್ರತೆ ಕ್ರಮ ವಹಿಸಿ.
ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ..
ಬೆಳಗಾವಿ : ಮಹಾರಾಷ್ಟ್ರ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಕೂಡಲೇ ಅಧಿಕಾರಿಗಳು ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೋಕಾಕ ನಗರದ ನಾಕಾ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಕೂಡಲೇ ಅಧಿಕಾರಿಗಳು ಸಂತ್ರಸ್ತ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ವರದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಪಶ್ಚಿಮ ಘಟ್ಟದಲ್ಲಿ ಧಾರಾಕಾರವಾಗಿ ಮಳೆಯು ಸುರಿಯುತ್ತಿದೆ. ನಮ್ಮ ಭಾಗದಲ್ಲಿಯೂ ಮಳೆಯು ನಿಲ್ಲುತ್ತಿಲ್ಲ.
ಈಗಾಗಲೇ ಘಟಪ್ರಭಾ ನದಿಗೆ 51 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. 62 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬಂದಿದ್ದಾದರೆ ಲೋಳಸೂರ ಸೇತುವೆಯು ಜಲಾವೃತಗೊಳ್ಳಲಿದೆ. ಇದರಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸುಮಾರು 28 ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಬರಲಿದೆ. ಹೀಗಾಗಿ ಈಗಿಂದಲೇ ಅಧಿಕಾರಿಗಳು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.