ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ..
ಹರ ಘರ್ ತಿರಂಗಾ ಅಭಿಯಾನಕ್ಕೆ ವ್ಯಾಪಕ ಬೆಂಬಲ ನೀಡುವಂತೆ ಕರೆ.
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಗಂಭೀರವಾಗಿ
ಆರೋಪಿಸಿದರು.
ಮಂಗಳವಾರ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಿಂದ ಆರಂಭವಾಗಿ ಇಂದಿನವರೆಗೂ ಸರ್ಕಾರ ಸಮರ್ಪಕ ಆಡಳಿತ ನೀಡಲು ವಿಫಲವಾಗಿದೆ ಎಂದು ಖೇದ ವ್ಯಕ್ತಪಡಿಸಿದರು.
ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕಳೆದಿದ್ದರೂ, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಸಚಿವ ಸಂಪುಟದ ಒಳಗಿನ ಭಿನ್ನಾಭಿಪ್ರಾಯಗಳೇ ಹೆಚ್ಚಾಗಿ ಕಾಣಿಸುತ್ತಿವೆ ಎಂದು ಹೇಳಿದರು.
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ.

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಪಶುವೈದ್ಯಕೀಯ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಆರೋಪಗಳು ಕೇಳಿಬಂದಿದ್ದು, ಸರ್ಕಾರ ಹಾಗೂ ಸಂಬಂಧಿತ ಸಚಿವರು ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಅವಕಾಶವೂ ಇಲ್ಲದಂತಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದು ಲಿಂಗರಾಜ ಪಾಟೀಲ ತಿಳಿಸಿದರು.
ಸಿಜೆಪಿ ಹೋರಾಟಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವ ಸಂತೋಷ್ ಲಾಡ್ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸುತ್ತಿರುವುದನ್ನು ಪ್ರಶ್ನಿಸಿದ ಅವರು, ಕಾಂಗ್ರೆಸ್‌ನ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರತಿವರ್ಷ ಆಗಸ್ಟ್ 13 ರ ಅಂಗವಾಗಿ ನಡೆಯುವ ‘ಹರ ಘರ್ ತಿರಂಗಾ’ ಅಭಿಯಾನ ಈ ವರ್ಷವೂ ರಾಜ್ಯಾದ್ಯಂತ ನಡೆಯಲಿದ್ದು, ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ನೀಟ್ ಪರೀಕ್ಷೆ ವಿಚಾರವಾಗಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳಲ್ಲಿ ನಿಜವಾದ ನೀಟ್ ವಿದ್ಯಾರ್ಥಿಗಳಿಗಿಂತ ರಾಜಕೀಯ ಉದ್ದೇಶದಿಂದ ಕೆಲವರು ಭಾಗವಹಿಸಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ವಿರೋಧ ಪಕ್ಷಗಳು ಇಂತಹ ಹೋರಾಟಗಳನ್ನು ಸಂಘಟಿಸುತ್ತಿವೆ ಎಂದು ಅವರು ಟೀಕಿಸಿದರು.
ಪ್ರಧಾನಿ ಮೋದಿ ಅವರ ನಾಯಕತ್ವವನ್ನು ವಿಶ್ವದ ಹಲವು ರಾಷ್ಟ್ರಗಳು ಮೆಚ್ಚಿಕೊಂಡಿವೆ. ದೇಶದಲ್ಲಿ ಹಲವು ಸುಧಾರಣಾ ಕ್ರಮಗಳು ಜಾರಿಯಾಗಿದ್ದು, ನೀಟ್ ಪರೀಕ್ಷೆಯಲ್ಲಿಯೂ ಹೊಸ ನಿಯಮಾವಳಿಗಳನ್ನು ತರಲಾಗಿದೆ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ಜನರು ಸತ್ಯವನ್ನು ಅರಿತಿದ್ದಾರೆ ಎಂದು ಸಂಜಯ್ ಪಾಟೀಲ ಹೇಳಿದರು.
ಈ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾದ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕ ಅರವಿಂದ ಪಾಟೀಲ, ಜಿಲ್ಲಾ ಅಧ್ಯಕ್ಷ ಗೀತಾ ಸುತಾರ, ಸಚೀನ್ ಕಡ್ಡಿ, ಸೇರಿದಂತೆ ಹಲವರು ಇದ್ದರು.