ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ..

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ..

ಬೆಳಗಾವಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನೆಕಾರರು, ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಬಿ. ನಾಗೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಟಿಜಿಟಿ ಮಳೆಯ ನಡುವೆಯೂ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಿತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಹಾಗೂ ಬಿಜೆಪಿ ಶಾಸಕ ಸ್ಥಾನದ ಆಕಾಂಕ್ಷಿ ಲಕ್ಷ್ಮೀ ಇನಾಮದಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಬಳಿಕ ಧರಣಿ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಇನಾಮದಾರ್, ಬಿ. ನಾಗೇಂದ್ರ ರಾಜೀನಾಮೆ ನೀಡುವವರೆಗೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.
ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಬೆಳೆ ಪರಿಹಾರ, ಮಾಶಾಸನ ಸೇರಿದಂತೆ ರೈತರು ಹಾಗೂ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಹಾಗೂ ವಿಧಾನಸೌಧದಲ್ಲಿಯೂ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಹೋರಾಟವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಕೆಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಗರದ ಹೊರವಲಯದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷ ಗೀತಾ ಸುತಾರ, ಬಸವರಾಜ ಹುಂದ್ರಿ, ಮಾಜಿ ಶಾಸಕ ಅನಿಲ್ ಬೆನಕೆ, ಎಂ.ಬಿ. ಜರಳಿ, ಮಾಜಿ ಶಾಸಕ ಸಂಜಯ್ ಪಾಟೀಲ, ಮಹೇಶ ಕುಮಟಳ್ಳಿ, ಸೋನಾಲಿ ಸರ್ನೋಭತ್, ರಾಜೇಂದ್ರಗೌಡ ಪಾಟೀಲ, ಮುರಗೇಂದ್ರಗೌಡ ಪಾಟೀಲ, ಅರವಿಂದ ಪಾಟೀಲ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *