ಪಾಲಿಕೆಯನ್ನು ಸೂಪರ್ಸೀಡ ಮಾಡುವ ಶಿಫಾರಸಿಗೆ ಮಹಾಪೌರರ ವಿರೋಧ…
ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ..
ಅಧಿಕಾರಿಗಳು ವಿವಿಧ ಸರ್ಕಾರಿ ಕಾರ್ಯಗಳಲ್ಲಿ ನಿರತರಾಗಿದ್ದರಿಂದ ಸಭೆಗಳಿಗೆ ಅಡಚಣೆ..
ಪ್ರಾದೇಶಿಕ ಆಯುಕ್ತರಿಗೆ ಪ್ರೀತಿ ಕಾಮಕರ ಮನವಿ.
ಬೆಳಗಾವಿ : ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ಸೀಡ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬಂದಿರುವ ಪ್ರಸ್ತಾವನೆಗೆ ಮಹಾಪೌರರಾದ ಪ್ರೀತಿ ವಿನಾಯಕ ಕಾಮಕರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮನವಿ ನೀಡಿದ್ದಾರೆ..
ಸೋಮವಾರ ಪ್ರಾದೇಶಿಕ ಆಯುಕ್ತರ ಕಛೇರಿಗೆ ಬೇಟಿ ನೀಡಿ, ಮಹಾನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. ಕಳೆದ ಐದು ತಿಂಗಳಲ್ಲಿ ಪರಿಷತ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಅಭಿವೃದ್ಧಿಪರ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿಯ ಮನವಿಯ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಅಂಗೀಕರಿಸಲಾಗಿದ್ದ ಕನ್ನಡಪರ ಗೊತ್ತುವಳಿ ಸಂಖ್ಯೆ 358ಕ್ಕೆ ಸಂಬಂಧಿಸಿದಂತೆ, ಆಗಸ್ಟ್ 18ರಂದು ನಡೆದ ಸಭೆಯಲ್ಲಿ ತಿದ್ದುಪಡಿ ಮಾಡಲಾಗಿದೆ. ಗಡಿ ವಿವಾದದ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯ ಪಡೆದು, ನಗರಾಭಿವೃದ್ಧಿ ಇಲಾಖೆಯಿಂದ ಸ್ಪಷ್ಟ ಅಭಿಪ್ರಾಯ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಅದೇ ರೀತಿ, ಮಹಾನಗರ ಪಾಲಿಕೆಯ 24ನೇ ಅವಧಿಯ ಮಹಾಪೌರರು ಮತ್ತು ಉಪಮಹಾಪೌರರು ಆಯ್ಕೆಯಾದ ನಂತರ ಪರಿಷತ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಿಯಮಿತವಾಗಿ ನಡೆಸಲಾಗಿದೆ ಎಂದು ಮೇಯರ್ ಪ್ರೀತಿ ಕಾಮಕರ ತಿಳಿಸಿದ್ದಾರೆ.
ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಫೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗಳ ಸಭೆಗಳು ನಡೆದಿವೆ. ಒಟ್ಟು 18 ಸಭೆಗಳನ್ನು ನಡೆಸಿ ಪಾಲಿಕೆಯ ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ, ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಸ್ಐಆರ್, ಜನಗಣತಿ ಮತ್ತು ಜಾತಿ ಪ್ರಮಾಣಪತ್ರ ವಿತರಣೆಯಂತಹ ಸರ್ಕಾರದ ವಿವಿಧ ಕಾರ್ಯಗಳಲ್ಲಿ ನಿಯೋಜನೆಗೊಂಡಿರುವುದರಿಂದ ಪದೇಪದೇ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ಪಾಲಿಕೆಯ ಸಾಮಾನ್ಯ ಆಡಳಿತ ಹಾಗೂ ಪರಿಷತ್ ಸಭೆಗಳನ್ನು ನಡೆಸುವಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಪ್ರಾದೇಶಿಕ ಆಯುಕ್ತರಿಗೆ ಪಾಲಿಕೆಯ ಮೇಯರ್-ಉಪಮೇಯರ್ ಮನವಿ ಮಾಡಿಕೊಂಡರು.
ಜೂನ್ 5ರಂದು ನಡೆದ ಲೆಕ್ಕಗಳ ಸ್ಥಾಯಿ ಸಮಿತಿ ಸಭೆಯಲ್ಲಿಯೂ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಗೈರುಹಾಜರಿಯ ವಿಚಾರವನ್ನು ಪ್ರಸ್ತಾಪಿಸಿ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಾನೂನುಬದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಲಾಗಿದೆ ಎಂದು ಮಹಾಪೌರರು ತಿಳಿಸಿದ್ದಾರೆ.
ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೊರತೆಯಿಂದ ಪರಿಷತ್ ಸಭೆಗಳನ್ನು ಆಯೋಜಿಸುವುದು ಕಷ್ಟವಾಗುತ್ತಿದೆ. ಇದನ್ನು ಆಡಳಿತಾತ್ಮಕ ವೈಫಲ್ಯವೆಂದು ಪರಿಗಣಿಸಿ ಮಹಾನಗರ ಪಾಲಿಕೆಯನ್ನು ಸೂಪರ್ಸೀಡ್ ಮಾಡುವ ಕ್ರಮ ಕೈಗೊಳ್ಳುವುದು ಸೂಕ್ತವಲ್ಲ.
ಸರ್ಕಾರದ ಮಾರ್ಗಸೂಚಿ ಹಾಗೂ ಸೂಚನೆಗಳಂತೆ ಪಾಲಿಕೆಯಿಂದ ಅಗತ್ಯ ನಿರ್ಣಯಗಳನ್ನು ಕೈಗೊಂಡು ಅವುಗಳನ್ನು ಪಾಲಿಸಲಾಗುತ್ತಿದೆ ಎಂದು ಪ್ರೀತಿ ಕಾಮಕರ ಪ್ರಾದೇಶಿಕ ಆಯುಕ್ತರಿಗೆ ತಿಳಿಸಿದರು.
ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ಸೀಡ ಮಾಡುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡುವ ಪ್ರಸ್ತಾವನೆಯನ್ನು ಮರುಪರಿಶೀಲಿಸಿ, ಪಾಲಿಕೆಯ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವಂತೆ ಪ್ರಾದೇಶಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ, ಉಪಮೇಯರ, ನಗರ ಸೇವಕರು ಸೇರಿದಂತೆ ಇತರರು ಇದ್ದರು.