ರಾಹುಲ್ ಗಾಂಧಿಯನ್ನು ಪೊಲೀಸ್ ವಶಕ್ಕೆ ಪಡೆದಿದ್ದು ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ..

ರಾಹುಲ್ ಗಾಂಧಿಯನ್ನು ಪೊಲೀಸ್ ವಶಕ್ಕೆ ಪಡೆದಿದ್ದು ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ..

ಬೆಳಗಾವಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಮೋದಿ ಹಟಾವೋ, ದೇಶ ಬಚಾವೋ’ ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಬಲಿಷ್ಠವಾಗಿರುವ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಶೀಲನೆ ಪ್ರಕ್ರಿಯೆಯನ್ನು ತೀವ್ರಗೊಳಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದ್ದು, ಮತದಾನದ ಹಕ್ಕನ್ನು ಕಸಿದುಕೊಳ್ಳಲು ಯೋಜಿತ ಸಂಚು ರೂಪಿಸಲಾಗಿದೆ ಎಂದು ದೂರಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ಪ್ರಶ್ನೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾರ್ತಿಕ್ ಪಾಟೀಲ್ ಮಾತನಾಡಿ, ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಮುಖ್ಯ. ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವ ಬದಲು ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ. ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಶೇಗಾವಿ, ಮಲ್ಲೇಶ ಚೌಗಲಾ, ಯಲ್ಲಪ್ಪ ಶಿಗೆ, ಉದಯ ಗೌಡ, ಮಂಜುನಾಥ ಗಂಗನವರ, ಐಶ್ವರ್ಯ ಸಾದನ್ನವರ, ಶಿವಾ ಹಂಪನವರ, ಪ್ರವೀಣ್ ತುಕ್ಕಾನಟ್ಟಿ, ಪ್ರಕಾಶ ಪಾಟೀಲ್, ಮಡಿವಾಳಪ್ಪ ಅಕ್ಕಿ ಸಾಗರ, ಶಿವು ಪಾಟೀಲ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *